ಸೋಮವಾರಪೇಟೆ ಮೇ. 29: ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ಯುವ ನಾಯಕತ್ವಕ್ಕೆ ಮನ್ನಣೆ ನೀಡುವ ಸಲುವಾಗಿ ಶಾಸಕ ಡಾ. ಮಂತರ್ ಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಸೋಮವಾರಪೇಟೆ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಯು. ಕಿರಣ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಡಿ.ಯು. ಕಿರಣ್, ಡಾ. ಮಂತರ್ ಗೌಡ ಅವರು ಕೇವಲ ರಾಜಕಾರಣಿಯಲ್ಲ, ಬದಲಿಗೆ ಸಾಮಾನ್ಯ ಜನರ ಬದುಕಿನ ಕಷ್ಟ-ಸುಖಗಳನ್ನು ಹತ್ತಿರದಿಂದ ಅರಿತಿರುವ ನಾಯಕ. ಅಭಿವೃದ್ಧಿಯ ಕುರಿತಾಗಿ ಸ್ಪಷ್ಟ ದೂರದೃಷ್ಟಿ ಹೊಂದಿರುವ ಅವರು, ಈ ಪೀಳಿಗೆಯ ಯುವಕರನ್ನು ಸನ್ಮಾರ್ಗದಲ್ಲಿ ನಡೆಸುವ ಮತ್ತು ಅವರಿಗೆ ಉದ್ಯೋಗ ಹಾಗೂ ಬದುಕು ಕಟ್ಟಿಕೊಡಲು ಶ್ರಮಿಸುವ ಶಕ್ತಿಯಾಗಿದ್ದಾರೆ. ಸಣ್ಣ ವಯಸ್ಸಿನಿಂದಲೇ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದು, ಯಾವುದೇ ಸ್ವಾರ್ಥವಿಲ್ಲದೆ ಪಕ್ಷಕ್ಕಾಗಿ ದುಡಿದಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಕಳೆದ ಬಾರಿ ಕೊಡಗು ಜಿಲ್ಲೆಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಆಗಮಿಸಿದ್ದ ಸಂದರ್ಭದಲ್ಲಿ, ಜಿಲ್ಲೆಯ ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಯಾಗಲಿರುವ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಡಾ. ಮಂತರ್ ಗೌಡ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಕೊಡಗು ಜಿಲ್ಲೆ ಇನ್ನಷ್ಟು ಅಭಿವೃದ್ಧಿ ಕಾಣಬೇಕಾದರೆ ಜಿಲ್ಲೆಗೆ ಸಚಿವ ಸ್ಥಾನ ಸಿಗುವುದು ಅನಿವಾರ್ಯವಾಗಿದೆ, ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.




