ಕುಶಾಲನಗರ ಆ. 07: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರಾದ ಡಿ.ವಿ. ಸದಾನಂದ ಗೌಡ ರವರು ಇಂದು ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಪಂಚಾಯಿತಿ ವ್ಯಾಪ್ತಿಯ ಬೊಳ್ಳೂರು ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

ಶತಮಾನಗಳಷ್ಟು ಹಳೆಯ ಇತಿಹಾಸ ಹೊಂದಿರುವ ಈ ದೇವಸ್ಥಾನವು ಸುತ್ತಮುತ್ತಲಿನ ಗ್ರಾಮಸ್ಥರ ಆರಾಧ್ಯ ದೈವ ಕ್ಷೇತ್ರವಾಗಿದ್ದು, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ರವರ ಭೇಟಿ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಭಕ್ತರು ಹಾಗೂ ಸ್ಥಳೀಯರ ಗಣನೀಯ ಸಂಖ್ಯೆಯಲ್ಲಿ ಸೇರಿದ್ದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ರವರ ಧರ್ಮಪತ್ನಿ ಹಾಗೂ ಪುತ್ರ ಕಾರ್ತಿಕ್ ಅವರೊಂದಿಗಿದ್ದರು. ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ಹಾಗೂ ಪತ್ನಿ ಲತಾ, ಶ್ರೀ ಚೌಡೇಶ್ವರಿ ದೇವಸ್ಥಾನದ ನಿರ್ದೇಶಕ ಗುಡ್ಡೆಮನೆ ವಿಶ್ವಕುಮಾರ್, ದೇವಸ್ಥಾನದ ಉಪಾಧ್ಯಕ್ಷ ದಾದಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅರ್ಚಕ ಅಣ್ಣು ಪೂಜಾರಿ ವಿಧಿವತ್ತಾಗಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನ ನಿರ್ದೇಶಕ ವಿಶ್ವಕುಮಾರ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ರವರು ಈ ಹಿಂದೆಯೂ ದೇವಸ್ಥಾನದ ಅಭಿವೃದ್ಧಿಗೆ ನೆರವು ನೀಡಿದ್ದಾರೆ ಎಂದು ಸ್ಮರಿಸಿ, ಮುಂದಿನ ದಿನಗಳಲ್ಲಿಯೂ ದೇವಸ್ಥಾನಕ್ಕೆ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.




