ಕುಶಾಲನಗರ, ಜೂ. 25: ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರ್ಯಾಯವಾಗಿ ಜುಲೈ 1, 2026 ರಿಂದ ಜಾರಿಗೆ ಬರಲಿರುವ ಹೊಸ ಯೋಜನೆಯಾದ “ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಾರ್ ಅಂಡ್ ಅಜೀವಿಕ್ ಮಿಷನ್” (VB-G RAM G) ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರದಲ್ಲಿ ಮಾಸ್ಟರ್ ಟ್ರೈನರ್ ಗಳಾಗಿ ಭಾಗವಹಿಸಿದ್ದ ಕುಶಾಲನಗರ ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರು (ಗ್ರಾಮೀಣ ಉದ್ಯೋಗ) ರಾಕೇಶ್ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಅವರು ಹೊಸ ಯೋಜನೆಯ ಉದ್ದೇಶಗಳು ಹಾಗೂ ಕಾರ್ಯವಿಧಾನಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ಈ ತರಬೇತಿಯಲ್ಲಿ ಕುಶಾಲನಗರ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಡಾಟಾ ಎಂಟ್ರಿ ಆಪರೇಟರ್‌ಗಳು, ಸಂಬಂಧಪಟ್ಟ ನರೇಗಾ ತಾಂತ್ರಿಕ ಸಹಾಯಕರುಗಳು ಹಾಗೂ ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸಂತೋಷ್ ಅವರು ಆಗಮಿಸಿದ್ದ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಮಾಡಿದರು.




