
ಬೆಂಗಳೂರು ಜ.2 ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ವನ್ಯಜೀವಿ ಮಂಡಳಿಯ ಸಭೆ ನಡೆಸಲಾಯಿತು. ರಾಜ್ಯದಲ್ಲಿ ಸಫಾರಿ ನಿರ್ಬಂಧಿಸಿರುವ ಕಾರಣಕ್ಕೆ ಅದರ ಮೇಲೆ ಅವಲಂಬಿತರಾಗಿರುವ ಸ್ಥಳೀಯರೂ ಉದ್ಯೋಗದಿಂದ ವಂಚಿತರಾಗುತ್ತಿದ್ದು, ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯುವಂತೆ ಮುಖ್ಯಮಂತ್ರಿಗಳು ಸಭೆಯಲ್ಲಿ ಸೂಚಿಸಿದರು.
ಇಂದಿನ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿ ಅನಿಲ್ ಕುಂಬ್ಳೆ ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ.ರೇ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.





