ಕುಶಾಲನಗರ, ಮಾ.24: ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಶ್ರೇಷ್ಠ ಮಟ್ಟದ ಕಾರ್ಯವೈಕರಿಗೆ ನೀಡಲಾಗುವ 2024-25ನೇ ಸಾಲಿನ ಪ್ರತಿಷ್ಠಿತ ‘ಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಭಾಜನವಾಗಿದೆ.
ಗುಡ್ಡೆಹೊಸೂರು ಪಂಚಾಯಿತಿಯು ಸ್ವಚ್ಛತೆ, ಕುಡಿಯುವ ನೀರು ಪೂರೈಕೆ, ತೆರಿಗೆ ಸಂಗ್ರಹಣೆ, ಪಂಚಾಯತ್ ಆಡಳಿತದಲ್ಲಿ ಡಿಜಿಟಲೀಕರಣ ಮತ್ತು ಪಾರದರ್ಶಕತೆಗೆ ಆದ್ಯತೆ ನೀಡುವುದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಾಯೋಜಿತ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿರುವ ಹಿನ್ನೆಲೆ ಸತತವಾಗಿ ಮೂರನೇ ಬಾರಿಗೆ ‘ಗಾಂಧಿ ಗ್ರಾಮ ಪುರಸ್ಕಾರ’ ಸಂದಿದೆ.
ಈ ಪುರಸ್ಕಾರವು 4 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಬೆಂಗಳೂರಿನಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಸರ್ಕಾರದ ವತಿಯಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯ ಮೊತ್ತವನ್ನು ಗ್ರಾಮದ ಮೂಲಭೂತ ಸೌಕರ್ಯಗಳ ಮತ್ತಷ್ಟು ಅಭಿವೃದ್ಧಿಗಾಗಿ ಬಳಸಲಾಗುವುದು ಎಂದು ಪಂಚಾಯತ್ ಮೂಲಗಳು ತಿಳಿಸಿವೆ.




